ಬೆಂಗಳೂರು: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇಂದು ಏಪ್ರಿಲ್ 05ರಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್. ಅಶೋಕ್, ಮಾಜಿ ಸಿಎಂ ಬಿ.ಎಸ್. ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇನ್ನು ಇದೇ ವೇಳೆ ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಸಹ ಬಿಜೆಪಿ ಸೇರಲಿದ್ದಾರೆ.
ಇನ್ನು ಬಿಜೆಪಿ ಸೇರ್ಪಡೆ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ ಎಮದು ಬರೆದುಕೊಂಡಿದ್ದಾರೆ.