ಮೈಸೂರು : ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.
ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ನಲ್ಲಿ ನೀವು (ಸಿದ್ದರಾಮಯ್ಯ) ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಕುಮಾರಸ್ವಾಮಿ ಕೇಳಿದರು. ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದರು.
ಕಾಂಗ್ರೆಸ್ ನೇತೃತ್ವದ ಐಎನ್ಡಿ ಮೈತ್ರಿಕೂಟ ಗೆಲುವು ಸಾಧಿಸಿದರೆ ಮೇಕೆದಾಟು ಬಂದ್ ಆಗುತ್ತದೆ ಎಂಬ ಡಿಎಂಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದು ಡಿಎಂಕೆ ಹೇಳಿದೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನವರು ಮಾತಾಡುತ್ತಾರೆ. ರಾಜ್ಯ ನೀರಾವರಿ ಯೋಜನೆಗಳಿಗೆ ದೇವೇಗೌಡರ ಕೊಡುಗೆ ಇದೆ. ದೇವೇಗೌಡರ ಬಗ್ಗೆ ಮಾತಾಡುವ ನೈತಿಕತೆ ಕಾಂಗ್ರೆಸ್ನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.